ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು.
ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದಾಗಿ ಇಂದು ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು ನಮ್ಮ ಸರ್ಕಾರ ಬಡವರ ಜೇಬಿಗೆ ಹಾಕುತ್ತಿದೆ. ಈ 1 ಲಕ್ಷ ಕೋಟಿ ಹಣದಲ್ಲಿ ಬಿಜೆಪಿ ಅಥವಾ ದಳದವರ ಒಂದು ಕಾರ್ಯಕ್ರಮ ಇದೆಯೇ ಎಂದು ಡಿಕೆಶಿ ಪ್ರಶ್ನಿಸಿದರು.
ನಾನು ಶಾಸಕನಾಗಿದ್ದಾಗ ಜೆ.ಹೆಚ್ ಪಟೇಲರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆವು. 27 ಇಲಾಖೆಯನ್ನು ಪಂಚಾಯ್ತಿಗೆ ಸೇರಿಸಿದೆವು. ಪಂಚಾಯ್ತಿಗೆ ಈ ರೀತಿ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.



