ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮನೋಹರ ತಹಶೀಲ್ದಾರ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹಾನಗಲ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಇ ಮೆಕಾನಿಕಲ್ ಪದವೀಧರರಾಗಿದ್ದರು.
ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಪಸಭಾಪತಿಯಾಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1989, 1999 ಮತ್ತು 2013ರಲ್ಲಿ ಗೆಲುವು ಸಾಧಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
ಮೃತದೇಹವನ್ನು ಹಾನಗಲ್ ಗೆ ಕೊಂಡೊಯ್ಯಲಿದ್ದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಅವರ ಸ್ವಗ್ರಾಮ ಅಕ್ಕಿಹೊಳಿಯ ತೋಟದ ಜಮೀನಿನಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.