ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಇಂದು ಪದಗ್ರಹಣ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ಮೊದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಜಯನಗರದಿಂದ ಸೋಲನುಭವಿಸಿದ್ದ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಸೌಮ್ಯ ರೆಡ್ಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.
ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕೆಂಬ ಚರ್ಚೆಯ ವೇಳೆ ಕೃಪಾ ಅಮರ್ ಆಳ್ವ, ಕಮಲಾಕ್ಷಿ ರಾಜಣ್ಣ, ಐಶ್ವರ್ಯ ಮಹದೇವ್, ನಯನಾ ಮೋಟಮ್ಮ, ವೀಣಾ ಕಾಶಪ್ಪನವರ್ ಮತ್ತು ಕವಿತಾ ರೆಡ್ಡಿ ಹೆಸರು ಮುಂಚೂಣಿಯಲ್ಲಿತ್ತು. ಅಂತಿಮವಾಗಿ ಹೈಕಮಾಂಡ್ ಸೌಮ್ಯ ರೆಡ್ಡಿಗೆ ಮಣೆ ಹಾಕಿದೆ.