ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸ್ತಬ್ಧವಾಗುವ ಸಾಧ್ಯತೆ ಇದೆ.
ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ, ಪಂಚಾಯಿತಿ ಅಧಿಕಾರಿಗಳು ಮತ್ತು ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಕೈಗೊಳ್ಳಲಾಗಿದೆ. ಪಿಡಿಒ, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು, ಜವಾನರು, ಸ್ವಚ್ಛತಾ ಕೆಲಸಗಾರರು, ನೀರಗಂಟಿಗಳು, ಡಾಟಾ ಎಂಟ್ರಿ ಆಪರೇಟರ್ ಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಧರಣಿಯಲ್ಲಿ ಭಾಗವಹಿಸಲಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಸಲಿದ್ದು, ಇಂದಿನಿಂದ ಗ್ರಾಮಾಡಳಿತ ಸ್ತಬ್ಧವಾಗಲಿದೆ.
ಪಿಡಿಒ ಹುದ್ದೆಗಳನ್ನು ಬಿ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸಬೇಕು. ಜೇಷ್ಠತಾ ಪಟ್ಟಿ ಅಂತಿಮಗೊಳಿಸಬೇಕು. ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡಬೇಕು. ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡಬೇಕು.
ನೇರ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇಂದಿನಿಂದ ಯಾವುದೇ ಸೇವೆ ಇರುವುದಿಲ್ಲ ಎಂದು ಹೇಳಲಾಗಿದೆ.