ಬೆಂಗಳೂರು : ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ನೂರು ವರ್ಷಗಳನ್ನು ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ (ಡಿ.27) ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ “ಗಾಂಧಿ ಭಾರತ” ಎನ್ನುವ ಹೆಸರಿನಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ದೇಶದೆಲ್ಲೆಡೆಯಿಂದ ಪಾಲ್ಗೊಳ್ಳುತ್ತಿರುವ ಕೈಕಾರ್ಯಕರ್ತರು, ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ಈ ಅಧಿವೇಶನವು ದೇಶದ ಐತಿಹಾಸಿಕ ಕಾರ್ಯಕ್ರಮವೆಂದು ಪರಿಗಣಿಸಲಾಗುತ್ತಿದ್ದು, ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಅಂದು ನಡೆದ ಅಧಿವೇಶನ ಹೆಚ್ಚು ಮಹತ್ವ ಪಡೆದಿದೆ. ಇದರ ಸವಿನೆನಪಿಗಾಗಿ ವರ್ಷವಿಡೀ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ, ಸ್ವಾತಂತ್ರ್ಯ ಸಂಗ್ರಾಮದ ಕ್ಷಣಗಳನ್ನು ಸ್ಮರಿಸಲಾಗುತ್ತದೆ.
ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಮಾಡುತ್ತದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದೆನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಬರಬೇಕು ಎಂದು ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
1924ರಲ್ಲಿ ಗಾಂಧೀಜಿ ಅವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. ಅದೇ ರೀತಿ ಇಂದೇ ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಹಾಗೆಯೇ ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಲಿದೆ.
ನಾಳೆ (ಡಿ.27) ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುತ್ತದೆ. ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು, ಐತಿಹಾಸಿಕ ಈ ಕಾರ್ಯಕ್ರಮ ದೇಶಕ್ಕೆ ಒಂದು ಮಾದರಿಯಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ಇಂದು ಐತಿಹಾಸಿಕ ಹಿನ್ನೆಲೆಯುಳ್ಳ ಇಲ್ಲಿನ ಕಾಂಗ್ರೆಸ್ ಬಾವಿ (ಪಂಪಾ ಸರೋವರ) ಹಾಗೂ ವೀರ ಸೌಧ ಕೇಂದ್ರ ಬಿಂದುವಾಗಿದೆ.