ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ನೀಡಲಾಗಿದ್ದ ರಜೆ ಕುರಿತ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಮಹಿಳೆಯರ ಋತುಚಕ್ರದ ವೇಳೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘದ ಅಧ್ಯಕ್ಷ ಹೆಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿದ್ದ ರ್ಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ ರಾಜ್ಯ ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ.
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಇದು ಅಸಂವಿಧಾನಿಕ. ಸಂವ್ಧಾನದ 14ನೇ ವಿಧಿಗೆ ವಿರುದ್ಧವಾಗಿದೆ ಆದ್ದರಿಂದ ಇದನ್ನು ರದ್ದುಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು.




