ಕಲಬುರಗಿ : ಸರ್ಕಾರದಲ್ಲಿ ಸಂಪನ್ಮೂಲಗಳ ಕೊರತೆ ಇದೆ. ಆದರೂ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.
ಆದರೆ ಪಾಪದ ಹಣದಲ್ಲಿ ಸರ್ಕಾರ ನಡೆಸುವುದು ನೈತಿಕವಾಗಿ ಸರಿಯಲ್ಲ ಎಂದು ಆಳಂದ ಕ್ಷೇತ್ರದ ಶಾಸಕ ಬಿ. ಆರ್ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಹೊಸ ಮದ್ಯದಂಗಡಿಗಳನ್ನು ಆರಂಭಿಸುವ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರದ ಈ ಕ್ರಮ ಸರಿಯಲ್ಲ. ನಾನು ವಿರೋಧಿಸುತ್ತೇನೆ ಎಂದರು.
ರಾಜ್ಯ ಸರ್ಕಾರವು 36 ಸಾವಿರ ಕೋಟಿ ಕರ ಸಂಗ್ರಹ ಮಾಡಲು ಬೇರೆ ಬೇರೆ ಕ್ಷೇತ್ರಗಳನ್ನು ಆಯ್ದುಕೊಳ್ಳಬೇಕಿತ್ತು. ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಅದನ್ನು ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಘೋಷಣೆ ಮಾಡಬೇಕಿತ್ತು.
ಎಪಿಎಲ್ ಕಾರ್ಡ್ದಾರರಿಗೆ ಈ ಯೋಜನೆಗಳ ಅವಶ್ಯಕತೆ ಇರಲಿಲ್ಲ. ಮದ್ಯದ ಅಂಗಡಿಗಳನ್ನು ಯಾವ ಪುರುಷಾರ್ಥಕ್ಕೆ ಹೆಚ್ಚಿಸುತ್ತಾರೆ?. ಸರ್ಕಾರ ನಡೆಸಲು ಆರ್ಥಿಕ ಸಮಸ್ಯೆಗಳಿದ್ದರೆ ಬೇರೆ ಮಾರ್ಗ ಹುಡುಕಬೇಕು.
ನನ್ನಂತವರಿಗೂ ಉಚಿತ ವಿದ್ಯುತ್ ನೀಡುವ ಅಗತ್ಯ ಏನಿದೆ ?. ಸಿಎಂ ಸಿದ್ದರಾಮಯ್ಯ ಸಮರ್ಥ ಆರ್ಥಿಕ ತಜ್ಞರಿದ್ದಾರೆ. ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಶಾಸಕ ಬಿ ಆರ್ ಪಾಟೀಲ್ ಹೇಳಿದರು.
ಈ ಬಗ್ಗೆ ಶಾಸಕರ ಸಭೆಯಲ್ಲಿ, ಪಕ್ಷದ ವೇದಿಕೆಯಲ್ಲಿ ಧ್ವನಿ ಎತ್ತುವೆ. ಒಂದು ವೇಳೆ ಸರ್ಕಾರ ಈ ನಿರ್ಣಯದಿಂದ ಹಿಂದೆ ಸರಿಯದಿದ್ದರೆ ನಾನೇ ಹೋರಾಟ ನಡೆಸುತ್ತೇನೆ. ಬಿಹಾರದಲ್ಲಿ ಮದ್ಯ ಮಾರಾಟ ನಿಷೇಧದಿಂದ ಅಪರಾಧ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ.
ಅಲ್ಲದೆ ಅಪಘಾತ ಪ್ರಕರಣಗಳು, ವಿವಿಧ ಕೌಟುಂಬಿಕ ಕಲಹಗಳು ಕಡಿಮೆಯಾಗಿವೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದರು.