ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿದವರಿಗೆ ಹಾಗೂ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು ಜನತಾ ಪಕ್ಷ ಘೋಷಿಸಿದೆ.
ಪ್ರಜ್ವಲ್ ನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂಬ ಅಭಿಯಾನ ನಡೆಸುತ್ತಿರುವ ಜನತಾ ಪಕ್ಷ ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ ವಿವಿಧೆಡೆ ಪೋಸ್ಟರ್ ಗಳನ್ನು ಅಂಟಿಸಿ ಅಭಿಯಾನ ನಡೆಸುತ್ತಿದೆ.
ಪೋಸ್ಟರ್ ಅಂಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಜನತಾ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಾಗೇಶ್, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಹಾಗೂ ಬಂಧಿಸಿ ತರುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದೇವೆ.
ಪ್ರಜ್ವಲ್ ಬಗ್ಗೆ ಮಾಹಿತಿ ನೀಡಿದರೆ ಹಾಗೂ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಿ ಸತ್ಕರಿಸಲಾಗುವುದು ಎಂದು ಜನತಾ ಪಕ್ಷದಿಂದ ಘೋಷಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ನಾಗೇಶ್ ಮಾತನಾಡುತ್ತಿದ್ದ ವೇಳೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಜನತಾ ಪಕ್ಷದ ನಾಗೇಶ್ ಅವರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.