ಬಳ್ಳಾರಿ: ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.
ವಿಜಯನಗರದ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದ್ದು, ಬಹಳ ಅಪಮಾನ ಮಾಡಿದೆ ಎಂದು ಆರೋಪಿಸಿದ್ದಾರೆ.
ಹೀಗಾಗಿ ಜನವರಿ 16 ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.
2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದೆ. ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ.
ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಅಲ್ಲದೇ ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಮತ್ತೆ ಸ್ವಾಮೀಜಿ ಪುನರುಚ್ಚರಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನಮಂಡಲ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಆ ಸಂದರ್ಭದಲ್ಲಿ ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್ ಮಾಡಲಾಗಿತ್ತು. ನಂತರ ಸರ್ಕಾರ ಆ ಬಗ್ಗೆ ಸಮರ್ಥನೆ ಮಾಡಿಕೊಂಡಿತ್ತು.