ಬೆಂಗಳೂರು : ರಾಜ್ಯದ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ರಾಜ್ಯ ರಾಜಕಾರಣದಲ್ಲಿ ಅತಿ ಹಿರಿಯ ರಾಜಕಾರಣಿಗಳ ಪಟ್ಟಿಯಲ್ಲಿ ಎಸ್.ಎಂ.ಕೃಷ್ಣ ಕೂಡ ಒಬ್ಬರು. ರಾಜ್ಯ ರಾಜಕಾರಣ ಮಾತ್ರವಲ್ಲದೆ ರಾಷ್ಟ್ರ ರಾಜಕಾರಣದಲ್ಲೂ ಉನ್ನತ ಹುದ್ದೆಗಳನ್ನು ಎಸ್.ಎಂ.ಕೃಷ್ಣ ನಿಭಾಯಿಸಿದ್ದಾರೆ.
ಹೀಗಾಗಿ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಡ್ಯದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಎಸ್.ಎಂ.ಕೃಷ್ಣ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಂತ್ರಿಯಾಗಿ , ರಾಜ್ಯದ ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಹಿರಿಮೆ ಅವರಿಗಿದೆ.
ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿ ಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಟ್ಟ ಅವರಿಗೆ ಈ ಗೌರವ ಸಲ್ಲಬೇಕು ಎಂದು ಆಗ್ರಹಿಸಲಾಗಿದೆ.
ಹೀಗಾಗಿ ನಿಮ್ಮ ಅವಧಿಯಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಮೌಲ್ಯವೂ ಹೆಚ್ಚಾಗಲಿದೆ. ಹೀಗಾಗಿ ದಯಮಾಡಿ ನಮ್ಮ ಮನವಿಯನ್ನು ಪರಿಗಣಿಸುವಂತೆ ಕೋರುತ್ತೇವೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.