ನವದೆಹಲಿ: ಹಿಂಡೆನ್ ಬರ್ಗ್ ವಿವಾದದಲ್ಲಿ ಸಿಲುಕಿರುವ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರ ರಾಜೀನಾಮೆಗೆ ಆಗ್ರಹಿಸಿ, ಅದಾನಿ ವಿವಾದವನ್ನು ಜಂಟಿ ಸಂಸದೀಯ ಸಮಿತಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಆಗಸ್ಟ್ 22ರಂದು ಕಾಂಗ್ರೆಸ್ ನಿಂದ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯ ಪ್ರಕಟಿಸಿದ್ದಾರೆ.
ಸೆಬಿ ಮತ್ತು ಅದಾನಿ ನಡುವಿನ ನಂಟಿನ ಕುರಿತಾಗಿ ತನಿಖೆ ಆಗಬೇಕು. ಷೇರುಪೇಟೆಯಲ್ಲಿ ಸಣ್ಣ ಹೂಡಿಕೆದಾರರ ಹಣಕ್ಕೆ ರಕ್ಷಣೆ ಒದಗಿಸಬೇಕು. ಸರ್ಕಾರ ಸೆಬಿ ಅಧ್ಯಕ್ಷರ ರಾಜೀನಾಮೆ ಪಡೆಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಅನೇಕ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಳಸಲು ಕಾಂಗ್ರೆಸ್ ಅಸ್ತ್ರಗಳನ್ನು ಚುರುಕುಗೊಳಿಸುತ್ತಿದೆ. ಅದಾನಿ ವಿಚಾರದ ಜೊತೆಗೆ ಜಾತಿ ಸಮೀಕ್ಷೆ ಬಗ್ಗೆಯೂ ಜನಾಂದೋಲನ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಪೂಜಾ ಕೇಂದ್ರಗಳನ್ನು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಗಳಿಗೆ ನೀಡುವ ಮೀಸಲಾತಿಯಲ್ಲಿ ರಾಜ್ಯ ಸರ್ಕಾರಗಳು ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.