ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಡೆಸಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹುಬ್ಬಳ್ಳಿಯ ಬೇರೆ ಬೇರೆ ಕಾಲೇಜು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು, ಕೊಲೆ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಿ, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹುಬ್ಬಳ್ಳಿ-ಧಾರವಾಡ ರಸ್ತೆ ತಡೆ ನಡೆಸಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ ‘ಜಸ್ಟೀಸ್ ಫಾರ್ ನೇಹಾ’ ಎಂಬ ಅಭಿಯಾನ ಆರಂಭಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಏಪ್ರಿಲ್ 18ರಂದು ಬಿವಿಬಿ ಕಾಲೇಜು ಆವರಣದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಬೆಳಗಾವಿ ಮುನವಳ್ಳಿ ಮೂಲದ ಫಯಾಜ್ ಎಂಬಾತ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು 12 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದ.