ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಜಮಾವಣೆಗೊಂಡಿರುವ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಆರೊಪಿಗೆ ಕಠಿಣ ಶಿಕ್ಷೆ ನೀಡಬೇಕು. ನೇಹಾ ಹತ್ಯೆಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ನೂರಾರು ಕಾರ್ಯಕರ್ತರು ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಪ್ರತಿಭಟನಾ ಕಾರರನ್ನು ತಡೆದು, ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.