ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಬೆಳೆಯಲಾಗಿದ್ದ 1 ಕೋಟಿ ರೂ.ಗೂ ಅಧಿಕ ಮೌಲ್ಯದ 200 ಕೆಜಿಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದ್ದು, ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಿವಶಂಕರ ಶರಣಪ್ಪ ಜೀರ್ ಬಂಧಿತ ಆರೋಪಿಯಾಗಿದ್ದು, ಈ ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ ಅದರ ಮಧ್ಯದಲ್ಲಿ 500 ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 500 ಕ್ಕಿಂತಲೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆಸಿದ್ದು ಕಂಡು ಬಂದಿದೆ. 1.1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡು, ಎನ್ಡಿಪಿಎಸ್ ಕಾಯ್ದೆ ಪ್ರಕಾರ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.


