ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇಂದು ಪ್ರಮುಖ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಯಿತು.
ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಸುಮಾರು 21 ಮಂದಿ ಸ್ವಾಮೀಜಿಗಳು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಸತೀಶ್ ಜಾರಕಿಹೊಳಿ ಅವರ ಅಧಿಕೃತ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಬೋವಿ ಮಠ, ವಾಲ್ಮೀಕಿ ಪೀಠ, ಕುರುಬ ಮತ್ತು ಮಡಿವಾಳ ಸಮುದಾಯ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳ 21 ಮಠಾಧೀಶರು, ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಈ ಭೇಟಿಯು ಕೇವಲ ಸೌಜನ್ಯದ ಭೇಟಿಯಾಗಿರದೆ, ರಾಜ್ಯ ರಾಜಕಾರಣದಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯದ ಕುರಿತಾದ ಗಂಭೀರ ಚರ್ಚೆಯಾಗಿತ್ತು ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಈ ಬಾರಿಯ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗದ ಪ್ರಭಾವಿ ನಾಯಕರಿಗೆ ನೀಡಬೇಕು ಎಂಬ ಒಕ್ಕೊರಲ ಒತ್ತಾಯವನ್ನು ಸ್ವಾಮೀಜಿಗಳು ಸಚಿವರ ಮುಂದಿಟ್ಟಿದ್ದಾರೆ.
ಅದರಲ್ಲೂ ಸತೀಶ್ ಜಾರಕಿಹೊಳಿ ಅವರು ಈ ಸ್ಥಾನಕ್ಕೆ ಅರ್ಹರಾಗಿದ್ದು, ಅವರಿಗೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಬೆಂಬಲ ನೀಡುವುದಾಗಿ ಸ್ವಾಮೀಜಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಜೊತೆಗೆ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯ ಮತ್ತು ಪ್ರಮುಖ ಖಾತೆಗಳನ್ನು ನೀಡುವ ಬಗ್ಗೆಯೂ ಚರ್ಚೆ ನಡೆದಿದೆ

