ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಹಾಗೂ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಬರೋಬ್ಬರಿ ₹28 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ₹1.75 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಪ್ರಯಾಣಿಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ.
ಬ್ಯಾಂಕಾಕ್ ಮತ್ತು ವಿಯೆಟ್ನಾಂನಿಂದ ಆಗಮಿಸಿದ ಪ್ರಯಾಣಿಕರ ಚಲನವಲನದ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು, ಅವರ ಲಗೇಜ್ ಬ್ಯಾಗ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.
ಈ ವೇಳೆ ಬ್ಯಾಗ್‌ಗಳ ಒಳಗಿನ ರಹಸ್ಯ ಕಪಾಟುಗಳಲ್ಲಿ ಅಡಗಿಸಿಡಲಾಗಿದ್ದ ಒಟ್ಟು 80.11 ಕೆಜಿ ತೂಕದ ಅತ್ಯಂತ ದುಬಾರಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹28 ಕೋಟಿ ಎಂದು ಅಂದಾಜಿಸಲಾಗಿದೆ. ಗಾಂಜಾ ತಂದಿದ್ದ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಎನ್‌ಡಿಪಿಎಸ್ (NDPS) ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ.


