ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಂದ ಶಂಕುಸ್ಥಾಪನೆ
ಬೀದರ: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಸುಮಾರು 5 ಕೋಟಿ ರೂ. ಕೆ ಕೆ ಆರ್ ಡಿ ಬಿ 2023-24ನೇ ಸಾಲಿನ ಅನುದಾನದಡಿ ನಿರ್ಮಾಣವಾಗಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸೌಲಭ್ಯ ಒದಗಿಸುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡುತ್ತಿದ್ದು, ಗ್ರಾಮೀಣ ಭಾಗದ ಮಕ್ಕಳಿಗೂ ನಗರ ಮಟ್ಟದ ಶಿಕ್ಷಣ ಸೌಲಭ್ಯ ದೊರೆಯುವಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಸಂಕಲ್ಪದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಿಜಿ ಹಳ್ಳದ ಸೇರಿದಂತೆ ಇನ್ನು ಅನೇಕ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಸಂತೋಷ ಬಿಜಿ ಪಾಟೀಲ


