ಬೆಳಗಾವಿ: ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿದರೆ ಹೆಚ್ಚಿನ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಗೈಡ್‌ಲೈನ್ಸ್ ಬದಲಾಯಿಸುತ್ತಿಲ್ಲ ಎಂದು ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಲ್ಲಿ ಸೂಕ್ತ ತಿದ್ದುಪಡಿ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ತಾವು ಸೇರಿದಂತೆ ಕೇಂದ್ರ ಸರ್ಕಾರಕ್ಕೆ 10 ರಿಂದ 11 ಬಾರಿ ಪತ್ರ ಬರೆದಿದ್ದೇವೆ.
ಆದಾಗ್ಯೂ, ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿಯಮಗಳನ್ನು ಬದಲಾಯಿಸಲು ಮುಂದಾಗುತ್ತಿಲ್ಲ ಎಂದು ಪರಮೇಶ್ವರ್ ದೂರಿದರು.
ರೈತರಿಗೆ ತಕ್ಷಣವೇ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವೇ ಮೊದಲ ಕಂತಿನ ಪರಿಹಾರವಾಗಿ ಪ್ರತಿಯೊಬ್ಬ ರೈತನಿಗೆ ₹2,500 ನೀಡುತ್ತಿದೆ. ಈ ಮೊತ್ತವೇ ಅಂತಿಮವಲ್ಲ; ಇದು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಆರಂಭಿಕ ನೆರವು ಮಾತ್ರವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಸಂಕಷ್ಟದಲ್ಲಿರುವ ರೈತರ ಕೈಹಿಡಿಯಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.


