ಬೆಂಗಳೂರು: ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿ ಮತ್ತು ಡಾ. ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ಮುಂದಾಗಿದೆ.
ಮುಖ್ಯಮಂತ್ರಿಗಳ ಮಟ್ಟದಲ್ಲಿ ಈ ಬಗ್ಗೆ ಪ್ರಾಥಮಿಕ ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
ಕಳೆದ ಅಧಿವೇಶನದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸಿದ ನಿರಂತರ ಪ್ರತಿಭಟನೆಯಿಂದ ಕಲಾಪ ಸುಗಮವಾಗಿ ನಡೆದಿಲ್ಲ. ಇದರಿಂದ ರಾಜ್ಯದ ಬರ ಪರಿಸ್ಥಿತಿ ಮತ್ತು ರೈತರ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆ ಸಾಧ್ಯವಾಗಿಲ್ಲ. ಹೀಗಾಗಿ ಚರ್ಚೆ ನಡೆಸಲು ಸರ್ಕಾರ ಮುಂದಾಗಿದ್ದು ಅಧಿವೇಶನ ಕರೆಯಲಿದೆ ಎನ್ನಲಾಗಿದೆ.
ರೈತರು, ಗ್ರಾಮೀಣ ಪ್ರದೇಶ ಜನಜೀವನದ ಮೇಲೆ ಬರದ ಪರಿಣಾಮ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಸರ್ಕಾರ ಮುಂದಾಗಿದ್ದು, ವಿಶೇಷ ಅಧಿವೇಶನದಲ್ಲಿ ಪ್ರಮುಖವಾಗಿ ಕಸ್ತೂರಿ ರಂಗನ್ ವರದಿ ಬಗ್ಗೆಯೂ ಚರ್ಚೆ ನಡೆಸಲಾಗುವುದು.
ಮಲೆನಾಡು, ಕರಾವಳಿ ಪ್ರದೇಶದ ಜನರ ಜೀವನ, ಆರ್ಥಿಕ ಚಟುವಟಿಕೆಗಳ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.


