ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ.
ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸದ್ಯಕ್ಕೆ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.
ಇದರಿಂದಾಗಿ ದರ್ಶನ್ ಅವರು ಮತ್ತಷ್ಟು ದಿನಗಳ ಕಾಲ ಜೈಲಿನಲ್ಲಿಯೇ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪೀಠವು ಪ್ರಕರಣದ ವಿಚಾರಣೆ ನಡೆಯುತ್ತಿರುವ ವೇಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ.
ಆದರೆ, ಕಳೆದ 7 ತಿಂಗಳುಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿದ ನ್ಯಾಯಾಲಯವು ಗರಂ ಆಯಿತು. "ಹೀಗೆ ವಿಚಾರಣೆ ನಡೆದರೆ ಪ್ರಕರಣ ಮುಕ್ತಾಯವಾಗಲು ತುಂಬಾ ಸಮಯ ಬೇಕಾಗುತ್ತದೆ. ವಿಚಾರಣೆ ತುಂಬಾ ನಿಧಾನಗತಿಯಲ್ಲಿ ಸಾಗುತ್ತಿದೆ" ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

