ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ತಲಾ 50 ಸಾವಿರ ನಿವೇಶನ ಹಂಚಿಕೆ ಮಾಡಲಾಗುವುದು. ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ನಿವೇಶನ ರಚನೆಗೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಪ್ರಣಾಳಿಕೆಯಲ್ಲಿ ವಸತಿ ರಹಿತರಿಗೆ ನಿವೇಶನ ನೀಡುವುದಾಗಿ ಘೋಷಿಸಿದ್ದೆವು.ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದೆ. ಗ್ರಾಮೀಣ ಪ್ರದೇಶದಲ್ಲಿ 30*40 ಅಡಿ ಅಳತೆಯ ಹಾಗೂ ನಗರ ಪ್ರದೇಶದಲ್ಲಿ 20*30 ಅಡಿ ಅಳತೆಯ ನಿವೇಶನಗಳನ್ನು ಅರ್ಹರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಲಭ್ಯವಿರುವ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆ ವಿಳಂಬ ಮಾಡದೆ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಣಾಳಿಕೆ ಘೋಷಣೆಗಳನ್ನು ಜಾರಿಗೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದು ಉಪಮುಖ್ಯಮಂತ್ರಿ ಮತ್ತು ಕಂದಾಯ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.


