ತಮಿಳುನಾಡಿನಿಂದ ಬೆಳಗಾವಿಗೆ ಹೊರಟಿದ್ದ ಭಾರತೀಯ ವಾಯುಪಡೆಯ (Indian Air Force) ಹೆಲಿಕಾಪ್ಟರ್‌ನಲ್ಲಿ ಹಾರಾಟದ ಮಧ್ಯೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರ (NH-48) ಪಕ್ಕದಲ್ಲಿರುವ ರೈತರೊಬ್ಬರ ಹೊಲದಲ್ಲಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ವಾಯುಪಡೆ ಹೆಲಿಕಾಪ್ಟರ್ ವಿವರ: ZD 4050 ನಂಬರಿನ ಭಾರತೀಯ ವಾಯುಪಡೆಯ (IAF) ಹೆಲಿಕಾಪ್ಟರ್ ತಮಿಳುನಾಡಿನ ಸೋಲೂರಿನಿಂದ ಬೆಳಗಾವಿಗೆ ತೆರಳುತ್ತಿತ್ತು.
ಸಂಜೆ ವೇಳೆಗೆ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೊಲದಲ್ಲಿ ತಾಂತ್ರಿಕ ದೋಷದ ಕಾರಣದಿಂದ ಪೈಲಟ್ ಹೆಲಿಕಾಪ್ಟರ್ ಅನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ.
ಹೆಲಿಕಾಪ್ಟರ್‌ನಲ್ಲಿದ್ದ ವಾಯುಪಡೆಯ ದೀಪಕ್ ಶರ್ಮಾ ಹಾಗೂ 5 ಜನ ಸಿಬ್ಬಂದಿ ಸೇರಿದಂತೆ ಒಟ್ಟು 6 ಜನರು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಜನನಿಬಿಡ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಸೇನಾ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಕಾಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದರು.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಶಿಗ್ಗಾಂವಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೆಲಿಕಾಪ್ಟರ್ ಸುತ್ತಲೂ ಭದ್ರತೆ ಒದಗಿಸಲಾಗಿದ್ದು, ವಾಯುಪಡೆಯ ತಾಂತ್ರಿಕ ತಂಡಕ್ಕೆ ಮಾಹಿತಿ ರವಾನಿಸಲಾಗಿದೆ.


