ಹುಬ್ಬಳ್ಳಿ: ಕೇವಲ 500 ರೂಪಾಯಿ ಸಾಲದ ವಿಚಾರಕ್ಕಾಗಿ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ (Crime) ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮೃತರನ್ನು ಆಟೋ ಚಾಲಕರಾಗಿದ್ದ ಈರಣ್ಣ ಹುರಕಡ್ಲಿ (45) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಈರಣ್ಣ ಅವರು ಆರೋಪಿ ಶಶಿಧರ್ ಎಂಬಾತನ ಬಳಿ 500 ರೂಪಾಯಿ ಸಾಲ ಪಡೆದಿದ್ದರು.
ಇದೇ ನಗದು ವ್ಯವಹಾರದ ಹಿನ್ನೆಲೆಯಲ್ಲಿ ಜೂನ್ 25 ರಂದು ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಉದ್ರಿಕ್ತನಾದ ಶಶಿಧರ್, ಈರಣ್ಣ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ತಲೆ ಜಜ್ಜಿದ್ದ ಎಂದು ಆರೋಪಿಸಲಾಗಿದೆ.
ಘಟನೆಯಿಂದ ತೀವ್ರವಾಗಿ ಗಾಯಗೊಂಡು ಒದ್ದಾಡುತ್ತಿದ್ದ ಬಿದ್ದಿದ್ದ ಈರಣ್ಣ ಅವರನ್ನು ತಕ್ಷಣವೇ ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂನ್ 28ರ ರಾತ್ರಿ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಮೊಕದ್ದಮೆ ದಾಖಲಾಗಿದ್ದು, ಆರೋಪಿ ಶಶಿಧರ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


