ಮಾನ್ವಿ: ತಾಲೂಕಿನ ಮದ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮಾನ್ವಿ ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ವಿ ಜೆಎಂಎಫ್‌ಸಿ ಹಾಗೂ ಸಿವಿಲ್ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಆನಂದ ಹೆಚ್. ಕೊಣ್ಣೂರು ಅವರು ಹುಟ್ಟಿನಿಂದ ಸಾವಿನವರೆಗೆ ಪ್ರತಿಯೊಬ್ಬರ ಜೀವನದಲ್ಲಿ ಕಾನೂನಿನ ಅವಶ್ಯಕತೆ ಇದೆ. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆಯಲು ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ತಾಲೂಕು ಕಾನೂನು ಸೇವಾ ಸಮಿತಿಯು ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಅರಿವು ಮತ್ತು ನೆರವು ನೀಡುತ್ತದೆ. ಆರ್ಥಿಕವಾಗಿ ಹಿಂದುಳಿದವರು ಮಹಿಳೆಯರು ಮಕ್ಕಳು ಹಾಗೂ ವಕೀಲರನ್ನು ನೇಮಿಸಿಕೊಳ್ಳಲು ಅಶಕ್ತರಾದವರಿಗೆ ಉಚಿತ ಕಾನೂನು ನೆರವು ಮತ್ತು ವಕೀಲರ ಸೇವೆಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಕಾನೂನಿನ ಮುಂದೆ ಎಲ್ಲರೂ ಸಮಾನರು. ತಪ್ಪು ಮಾಡಿದವರಿಗೆ ಶಿಕ್ಷೆ ಅನಿವಾರ್ಯ. ಪ್ರತಿಯೊಬ್ಬ ನಾಗರಿಕರಿಗೂ ಮೂಲಸೌಲಭ್ಯಗಳು ಪೌಷ್ಠಿಕ ಆಹಾರ ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವು ಹಕ್ಕುಗಳಿವೆ. ಅಪ್ರಾಪ್ತರು ವಾಹನ ಚಲಾಯಿಸುವುದು ಕಾನೂನುಬಾಹಿರ. ಜನನ ಮತ್ತು ಮರಣ ಪ್ರಮಾಣ ಪತ್ರ ಸೇರಿದಂತೆ ದಾಖಲೆಗಳಲ್ಲಿನ ದೋಷಗಳನ್ನು ಸರಿಪಡಿಸಲು ನ್ಯಾಯಾಲಯದ ಮೊರೆ ಹೋಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳ ರಾಜಿ ಇತ್ಯರ್ಥಕ್ಕೆ ಲೋಕ್ ಅದಾಲತ್ ಉತ್ತಮ ವೇದಿಕೆಯಾಗಿದೆ. ಪೋಕ್ಸೋ ಕಾಯ್ದೆಯು ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವ ಪ್ರಮುಖ ಕಾನೂನಾಗಿದೆ. ವಿದ್ಯಾರ್ಥಿಗಳು ಕಾನೂನಿನ ಜ್ಞಾನವನ್ನು ಪಡೆದುಕೊಂಡರೆ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಹೇಳಿದರು.
ವಕೀಲರಾದ ದತ್ತಾತ್ರೇಯ ಹಿರೇಕೊಟ್ನೆಕಲ್ ಅವರು ರಾಷ್ಟ್ರೀಯ ಕಾನೂನು ಸೇವೆಗಳ ದಿನ ಹಾಗೂ ಕಾನೂನು ಅರಿವು ಮತ್ತು ನೆರವು ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ನಾಗಪ್ಪ ಮಾಲಗಟ್ಟಿ ತಾಲೂಕು ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಬಾದರದಿನ್ನಿ ಹಿರಿಯ ವಕೀಲರಾದ ಗುಮ್ಮ ಬಸವರಾಜ ಚನ್ನಬಸವನಾಯಕ ಬಲ್ಲಟ್ಟಗಿ ರಾಘವೇಂದ್ರ ಶಶಿಕಾಂತಯ್ಯ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ :ಆಂಜನೇಯ ನಸಲಾಪುರ


