ಬೆಂಗಳೂರು: ಬಿಎಂಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ತುಮಕೂರು ಜಿಲ್ಲೆಯ ಸಿರಾ ಮೂಲದ ಮನು ಎಂದು ಗುರುತಿಸಲಾಗಿದೆ.ಬೆಂಗಳೂರಿನ ನೆಲಮಂಗಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನು ತಮ್ಮ ಪತ್ನಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮಾಹಿತಿ ಪ್ರಕಾರ, ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಮನು ಅವರ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪತ್ನಿಯ ಕಣ್ಣೆದುರೇ ಪತಿ ಮೃತಪಟ್ಟಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮನು ಅವರು ನೆಲಮಂಗಲದ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಮನು ಅವರು ಸುಮಾರು 8 ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದರು.
ಮದುವೆಯಾಗಿ ಕೆಲವೇ ತಿಂಗಳಲ್ಲಿ ದುರಂತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


