ಹುಬ್ಬಳ್ಳಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅ.೨೩ರಂದು ಶಿವಸೇನಾ ಕರ್ನಾಟಕ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ನೀಡಲಾಗುತ್ತಿರುವ ೨,೫೦೦ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡುವ ಬದಲು ಅಲ್ಪ ಮೊತ್ತವನ್ನು ನೀಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ೨,೦೦೦ ನೀಡುತ್ತಿರುವುದು ರಾಜಕೀಯ ಲಾಭದ ಉದ್ದೇಶದಿಂದ ಎಂದು ಆರೋಪಿಸಿದ ಸಿದ್ದಲಿಂಗ ಸ್ವಾಮೀಜಿ ಅವರು, ಬರಗಾಲದಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ಸಮರ್ಪಕ ಪರಿಹಾರ ಮತ್ತು ನೆರವು ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದರು.
ಕಬ್ಬು ಬೆಳೆದು ಪೂರೈಸುವ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿಯೇ ಉಳಿಯುತ್ತಿದ್ದರೆ, ಸಕ್ಕರೆ ಕಾರ್ಖಾನೆಗಳ ಮಾಲೀಕರು ಶ್ರೀಮಂತರಾಗುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಸರ್ಕಾರ ಮತ್ತು ಕಾರ್ಖಾನೆಗಳ ಮಾಲೀಕರ ನಡುವೆ ಒಳ ಒಪ್ಪಂದವಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಟೀಕೆ ಮಾಡಿದ ಸಿದ್ದಲಿಂಗ ಸ್ವಾಮೀಜಿ, ಅವರು ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಮುಖ್ಯಮಂತ್ರಿಯನ್ನು ಶರ್ಟ್ ಹಿಡಿದು ಹೊರಗೆ ತಳ್ಳಿದ ಘಟನೆ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ವರ್ತನೆಗಳ ಬಗ್ಗೆ ರಾಜಕೀಯ ಪಕ್ಷಗಳು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದರು.
ಬಿಜೆಪಿ ವಿರುದ್ಧದ ಪ್ರತಿಭಟನೆಗಳ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕರು ಮಾತನಾಡುವುದಿಲ್ಲ ಎಂಬ ಆರೋಪ ಮಾಡುವವರು, ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್ ನಾಯಕರು ಮಾತನಾಡುತ್ತಾರೆಯೇ ಎಂಬುದನ್ನು ನೋಡಲಿ ಎಂದು ಸವಾಲು ಹಾಕಿದರು. ಪ್ರತಿಭಟನೆಗಳ ಹೆಸರಿನಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.
ದೇಶಭಕ್ತಿ ಮತ್ತು ರಾಷ್ಟ್ರಗೀತೆಗೆ ಸಂಬoಧಿಸಿದ ವಿಚಾರವಾಗಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ತಾವು ಬೆಂಬಲಿಸುವುದಿಲ್ಲ. ವಂದೇ ಮಾತರಂ ಹೇಳದವರ ಮತ ನಮಗೆ ಬೇಡ. ಅ. ೨೩ರಂದು ನಡೆಯಲಿರುವ ರಾಜ್ಯಾದ್ಯಂತದ ಪ್ರತಿಭಟನೆಯ ಮೂಲಕ ರೈತರ ಸಮಸ್ಯೆಗಳು, ಬರ ಪರಿಹಾರ, ಕಬ್ಬು ಬೆಳೆಗಾರರ ಬೇಡಿಕೆಗಳು ಹಾಗೂ ಸರ್ಕಾರಗಳ ನೀತಿಗಳ ವಿರುದ್ಧ ಧ್ವನಿ ಎತ್ತಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ರಾ.ಮು. ಸ್ವಾಮಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ, ಎಸ್. ಭಾಸ್ಕರನ್, ಅಮರನಾಥ, ಮಹಾಲಿಂಗಣ್ಣ ಗುಂಜಗಾವಿ, ವಿಜಯ ಪಾಟೀಲ, ಮಂಜುನಾಥ ಹಲಾವರ, ಭರತ ಸಾವಂತ, ಅಭಿನಂದನ ಇತರರಿದ್ದರು.
ವರದಿ : ಸುಧೀರ್ ಕುಲಕರ್ಣಿ


