ಹುಬ್ಬಳ್ಳಿ : ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವೀರ ಬೇಕರಿಯಲ್ಲಿ ದುಷ್ಕರ್ಮಿಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ಸಂಜೆ ನಡೆದಿದೆ.
ಲಭ್ಯ ಮಾಹಿತಿಯ ಪ್ರಕಾರ, ಕೆಲ ಯುವಕರು ಬೇಕರಿಗೆ ನುಗ್ಗಿ ಮಾಲೀಕರೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ, ಬೇಕರಿಯಲ್ಲಿದ್ದ ಆಹಾರ ಪದಾರ್ಥಗಳು, ಗಾಜಿನ ಶೋಕೇಸ್ ಹಾಗೂ ಇತರೆ ಸಾಮಗ್ರಿಗಳನ್ನು ಹಾನಿಗೊಳಿಸಿ ದಾಂಧಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹಲ್ಲೆಯಲ್ಲಿ ಬೇಕರಿ ಸಿಬ್ಬಂದಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವರದಿ : ಸುಧೀರ್ ಕುಲಕರ್ಣಿ


