ಬೆಳಗಾವಿ: ಬಸವ ಮಂಟಪ ಪುಸ್ತಕದ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ವಿದೇಶಕ್ಕೆ ತೆರಳಲು ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.ಬಳಿಕ ಈ ಕುರಿತು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು.
ಅಲ್ಲದೆ, ಬೆಳಗಾವಿಯಲ್ಲಿಯೂ ರವಿ ಹಂಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಕುತೂಹಲ ಮೂಡಿದೆ.
ಏನಿದು ಬಸವ ಮಂಟಪ ಪುಸ್ತಕ ವಿವಾದ?
‘ಬಸವ ಮಂಟಪ’ ಪುಸ್ತಕದಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಅಂಶಗಳಿವೆ ಎಂದು ಬಸವಪರ ಹಾಗೂ ಲಿಂಗಾಯತ ಸಂಘಟನೆಗಳು ಆರೋಪಿಸಿವೆ.ಪುಸ್ತಕದ ವಿರುದ್ಧ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದು, ಲೇಖಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಈ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಹಾಗೂ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


