ಬೆಂಗಳೂರು : ಶೀಘ್ರದಲ್ಲಿಯೇ ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕೇಂದ್ರ ಸರ್ಕಾರ ತೈಲೋತ್ಪನ್ನಗಳ ದರವನ್ನು ಏರಿಕೆ ಮಾಡಿದೆ. ಇದರಿಂದಾಗಿ ಬಸ್ ಟಿಕೆಟ್ ದರ ಏರಿಸುವ ಅನಿವಾರ್ಯವಿದೆ.ಅಲ್ಪ ಪ್ರಮಾಣದಲ್ಲಿ ದರ ಏರಿಕೆಯಾಗಲಿದೆ ಎಂದು ತಿಳಿಸಿದರು.
ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನ ದರಗಳನ್ನು ಹೆಚ್ಚಳ ಮಾಡಿದೆ. ಹೀಗಿದ್ದಾಗ್ಯೂ ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ.
ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.


