ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಜನರ ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು, ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪ್ರತ್ಯೇಕ ಪೀಠವನ್ನು ಸ್ಥಾಪಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ನ್ಯಾಯದಾನ ಪ್ರಕ್ರಿಯೆ ಮತ್ತಷ್ಟು ಸುಲಭ
ಲಡಾಖ್‌ನಂತಹ ದೂರದ ಮತ್ತು ಭೌಗೋಳಿಕವಾಗಿ ಅತ್ಯಂತ ಕಠಿಣವಾದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಹತ್ತಿರವಾಗಿಸುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ಬರೆದುಕೊಂಡಿರುವ ಅಮಿತ್ ಶಾ, "ಲಡಾಖ್‌ನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದರಿಂದ ಸ್ಥಳೀಯ ನಾಗರಿಕರು ತಮ್ಮ ಕಾನೂನು ಪರಿಹಾರಗಳನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳಿಗಾಗಿ ತೆಗೆದುಕೊಳ್ಳುತ್ತಿದ್ದ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ" ಎಂದು ತಿಳಿಸಿದ್ದಾರೆ.


