ಭಾಲ್ಕಿ : ಪಕ್ಷದ ಶಿಸ್ತು ಹಾಗೂ ಸಂಘಟನಾ ನಿಯಮಗಳನ್ನು ಉಲ್ಲಂಘಿಸಿ, ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶಿವಾಜಿ ಮೇತ್ರೆ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಭಾಲ್ಕಿ ಮಂಡಲ ಅಧ್ಯಕ್ಷ ವೀರಣ್ಣ ಕಾರಬಾರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪಕ್ಷದ ತತ್ವ, ಸಿದ್ಧಾಂತ ಹಾಗೂ ಶಿಸ್ತಿಗೆ ಧಕ್ಕೆ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಪಕ್ಷದ ಸಂಘಟನೆ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಸಂಘಟನಾ ಶಿಸ್ತು ಮತ್ತು ಆಂತರಿಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಯಾವುದೇ ವ್ಯಕ್ತಿಯಾಗಿರಲಿ, ಅವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಪಕ್ಷದ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ವೀರಣ್ಣ ಕಾರಬಾರಿ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಶಿಸ್ತು ಪ್ರತಿಯೊಬ್ಬ ಕಾರ್ಯಕರ್ತನಿಗೂ ಅನ್ವಯವಾಗಲಿದ್ದು, ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ನಡೆಯುವ ಯಾವುದೇ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂಬ ಸಂದೇಶವನ್ನು ಈ ಕ್ರಮದ ಮೂಲಕ ಪಕ್ಷ ನೀಡಿದೆ.
ಶಿವಾಜಿ ಮೇತ್ರೆ ಅವರ ಉಚ್ಚಾಟನೆಯ ಆದೇಶವು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಆರು ವರ್ಷಗಳ ಅವಧಿಗೆ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಗಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ : ಸಂತೋಷ ಬಿಜಿ ಪಾಟೀಲ


