ಜೈಪುರ: ರಾಷ್ಟ್ರೀಯ ಮಟ್ಟದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜೈಪುರದ ಶಹೀದ್ ಸ್ಮಾರಕ್‌ನಲ್ಲಿ ಸೋಮವಾರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವೇದಿಕೆಯತ್ತ ಬಂದು ದೀಪ್ಕೆ ಅವರಿಗೆ ಹೊಡೆದಿರುವುದು ಕಾಣಿಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಬೆಂಬಲಿಗರು ಮಧ್ಯಪ್ರವೇಶಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
NEET ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ CJP ಈ ಪ್ರತಿಭಟನೆಯನ್ನು ಆಯೋಜಿಸಿತ್ತು.
ಕೇಂದ್ರ ಶಿಕ್ಷಣ ಸಚಿವ Dharmendra Pradhan ಅವರ ರಾಜೀನಾಮೆಗೆ ಪಕ್ಷ ಒತ್ತಾಯಿಸಿದ್ದು, ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಪೋಷಕರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವೂ ಈ ಪ್ರತಿಭಟನೆಯದ್ದಾಗಿತ್ತು.


