ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್ ಬಳಗಾರ್ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕ್ರೂಸರ್ ವಾಹನ ಮತ್ತು ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯಲ್ಲಾಪುರ ಬಳಿಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನ ಪರಸ್ಪರ ಡಿಕ್ಕಿಯಾಗಿವೆ.
ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, 6 ಮಂದಿ ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರು ಧಾರವಾಡ ಮೂಲದವರು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಪ್ರಗತಿಯಲ್ಲಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.


