ಬೆಂಗಳೂರು: ಭಾರತದ ಮೂಲ ನಿವಾಸಿಗಳಾದ ದಲಿತರು, ಬುಡಕಟ್ಟು ಹಾಗೂ ಅಲೆಮಾರಿ ಸಮುದಾಯದವರೇ ಈ ನೆಲದ ನೈಜ ಯಜಮಾನರು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದ್ದರೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ದಕ್ಕಿಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟು ಘಟಕದ ನೂತನ ಅಧ್ಯಕ್ಷರಾಗಿ ಎಲ್ಲಪ್ಪ ಅವರು ಅಧಿಕಾರ ಸ್ವೀಕರಿಸಿದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಸಮಾಜ ಸುಧಾರಕರಾದ ಬಿರ್ಸಾ ಮುಂಡಾ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಿ. ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ಈ ದೇಶದ ನಾಯಕತ್ವ ಮತ್ತು ಮಾಲೀಕತ್ವ ಮೂಲ ನಿವಾಸಿಗಳ ಕೈ ತಪ್ಪಿ ಬೇರೆಯವರ ಪಾಲಾಗಿದೆ. ಸ್ವಾತಂತ್ರ್ಯ ಹೋರಾಟದ ಮೂಲ ಆಶಯವೇ ಎಲ್ಲರಿಗೂ ಸಮಪಾಲು ಮತ್ತು ಸಮಬಾಳು ನೀಡುವುದಾಗಿತ್ತು.
ಅಲೆಮಾರಿ ಹಾಗೂ ಬುಡಕಟ್ಟು ಸಮುದಾಯದವರು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೆ ಸ್ವಾವಲಂಬಿಗಳಾಗಿ ಬದುಕಬೇಕು.
ಈ ಸಮುದಾಯಗಳ ಸಂಸ್ಕೃತಿ ಮತ್ತು ಕಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಜಾಗತಿಕ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


