ಚೆನ್ನೈ: ತಮಿಳುನಾಡಿನ ರಾಜಕೀಯ ರಂಗದಲ್ಲಿ ದಶಕಗಳ ಕಾಲದ ಸಿನೆಮಾ ವರ್ಚಸ್ಸಿನ ನಂತರ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ಅಧಿಕೃತವಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.
ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ತಮಿಳುನಾಡಿನಲ್ಲಿ ಸುದೀರ್ಘ ರಾಜಕೀಯ ಕಸರತ್ತು ಮತ್ತು ತೀವ್ರ ಪೈಪೋಟಿಯ ನಂತರ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಅವರಿಗೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ವಿಜಯ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಪೀಳಿಗೆಯ ನಾಯಕತ್ವಕ್ಕೆ ನಾಂದಿ ಹಾಡಿದ್ದಾರೆ.

