ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ 18ರವರೆಗೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.
ಅಧಿವೇಶನಕ್ಕೆ ಸಂಬಂಧಿಸಿದಂತೆ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಆದ್ಯತೆ ನೀಡುವುದು, ಪ್ರಾದೇಶಿಕ ಅಸಮತೋಲನದ ಕುರಿತು ಚರ್ಚಿಸುವುದು ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಧಾನಮಂಡಲದಲ್ಲಿ ಸಮಗ್ರ ಚರ್ಚೆ ನಡೆಸಲು ಈ ಅಧಿವೇಶನ ಮಹತ್ವದ್ದಾಗಿದೆ.
10 ದಿನಗಳ ಅಧಿವೇಶನ ನಡೆಸಲು ಚಿಂತನೆ
ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆದಿತ್ತು. ಈ ಸಂದರ್ಭದಲ್ಲಿ ಡಿಸೆಂಬರ್ 7ರಿಂದ ಸುಮಾರು 10 ದಿನಗಳ ಕಾಲ ಅಧಿವೇಶನ ನಡೆಸುವ ಅಭಿಪ್ರಾಯ ವ್ಯಕ್ತವಾಗಿತ್ತು. ಇದೀಗ ಡಿಸೆಂಬರ್ 7ರಿಂದ 18ರವರೆಗೆ ಅಧಿವೇಶನ ನಡೆಸುವ ಉದ್ದೇಶದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.


