ಮಾನ್ವಿ: ಶಿಕ್ಷಣವನ್ನು ಪ್ರತಿಯೊಬ್ಬರೂ ಪಡೆದುಕೊಂಡಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಶಾಸಕರ ಸುಪುತ್ರ ಶಿವರಾಜ ನಾಯಕ ಸಾಹುಕಾರ ಹೇಳಿದರು.ಪಟ್ಟಣದ ಶ್ರೀ ಗುರುದೇವ ಪಬ್ಲಿಕ್ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿ-ತೀಡಿ ಅವರ ಬಾಳಿಗೆ ಬೆಳಕಾಗುವ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಗುರುಗಳನ್ನು ಗೌರವಿಸಬೇಕು ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಾಣೇಶ್ ಮಾತನಾಡಿ, ಶಿಕ್ಷಕರು ಬೋಧಿಸುವ ಜ್ಞಾನವನ್ನು ಅಳವಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಬೇಕು. ಜೊತೆಗೆ ಉತ್ತಮ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮತ್ತೋರ್ವ ಅತಿಥಿ ಗಿರಿಜಾ ಮಾತನಾಡಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಣ್ಣ ರಾಮಯ್ಯ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣವು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು ಎಂಬ ಮಾತನ್ನು ಉಲ್ಲೇಖಿಸಿ, ಶಿಕ್ಷಣವು ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ವಿದ್ಯಾರ್ಥಿಗಳು ಸದಾ ಗೌರವ ಸಲ್ಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚನ್ನಬಸವ ನಾಯಕ ವಕೀಲರು, ಆಂಜನೇಯ ನಾಯಕ,ಲಲಿತಾ,ಅಮರೇಶ ನಂದಿಹಾಳ, ರಾಮಣ್ಣ ನಸಲಾಪುರ, ಶರಣಮ್ಮ, ಶಿಕ್ಷಕಿಯರಾದ ತಿಪ್ಪಮ್ಮ, ಮಹಾಂಕಾಳಿ, ಕಾವ್ಯ, ಅನಿತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಯಾದ ರವಿತೇಜ್ ಕಾರ್ಯಕ್ರಮ ನಿರೂಪಿಸಿದರೆ ಚೇತನ್ ಸ್ವಾಗತಿಸಿದರೆ, ಮಹೇಶ್ ವಂದಿಸಿದರು.
ವರದಿ : ಆಂಜನೇಯ ನಸಲಾಪುರ


