ಶಿವಮೊಗ್ಗ : ರಾಜ್ಯ ಸರ್ಕಾರ ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿಯ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಜಿ.ಪಂ. ಮತ್ತು ತಾಪಂ ಚುನಾವಣೆಯ ಮೀಸಲಾತಿಯ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅ.19ರವರೆಗೆ ಅವಕಾಶವಿತ್ತು.
ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಕರಡು ಅಧಿಸೂಚನೆ ಹೊರಡಿಸಲಾಗುವುದು. ನಂತರ ರಾಜ್ಯ ಚುನಾವಣೆ ಆಯೋಗ ಚುನಾವಣೆ ಪ್ರಕ್ರಿಯೆ ನಡೆಸಲಿದೆ ಎಂದು ವಿವರಿಸಿದರು.ರಾಜ್ಯ ಸರ್ಕಾರ ಗ್ರಾಮೀಮ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.


