ಶಿವಮೊಗ್ಗ: ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಯಶಸ್ವಿಯಾಗಿ ತಲುಪಿಸಲಾಗಿದ್ದು, ಇದೇ ಮೊದಲ ಬಾರಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುವ ಕಾರ್ಯ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಆರಂಭದ ಸಿದ್ಧತೆಗಳು, ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆಯ ಪ್ರಗತಿಯ ಬಗ್ಗೆ ಮಾಹಿತಿ ಹಂಚಿಕೊಂಡರು.
ಹೆಚ್ಚುವರಿ ಪುಸ್ತಕಗಳ ಪೂರೈಕೆ ವಿದ್ಯಾರ್ಥಿಗಳ ಪ್ರವೇಶಾತಿ (ಅಡ್ಮಿಷನ್) ಸಂಖ್ಯೆಯಲ್ಲಿ ವ್ಯತ್ಯಾಸವಾಗಿರುವ ಶಾಲೆಗಳಿಗೆ ಕೊರತೆಯಾಗದಂತೆ, ಶೀಘ್ರದಲ್ಲೇ ಹೆಚ್ಚುವರಿ ಪಠ್ಯಪುಸ್ತಕಗಳನ್ನು ಒದಗಿಸಲು ಇಲಾಖಾ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.


