ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಜುಲೈ 2 ರವರೆಗೆ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಜೂನ್ 30ರಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಧಾರವಾಡ, ದಕ್ಷಿಣ ಕನ್ನಡ ಸೇರಿ 6ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಕುಮಟಾದಲ್ಲಿ ಹೆದ್ದಾರಿ ಮೇಲೆ ನೀರು ನುಗ್ಗಿ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.
ಗೋಕರ್ಣದ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ನೀರು ನಿಂತಿತ್ತು. ಪಂಪ್ ಮೂಲಕ ಗರ್ಭಗುಡಿಯಲ್ಲಿನ ನೀರು ಖಾಲಿ ಮಾಡಲಾಯಿತು. ಮಹಾಗಣಪತಿ ದೇವಾಲಯದ ಮುಂದಿನ ರಸ್ತೆ, ಮೇಲಿನ ಕೇರಿ ರಸ್ತೆ ಜಲಾವೃತಗೊಂಡಿದ್ದವು.


