ಬೆಂಗಳೂರು: ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಕುಟುಂಬದ ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಸುಳ್ಳು ಆದಾಯ ಪ್ರಮಾಣ ಪತ್ರ ನೀಡಿ ಸರ್ಕಾರದ ಹುದ್ದೆ ಗಿಟ್ಟಿಸಲು ಪ್ರಯತ್ನಿಸಿದ ಆರೋಪದ ಮೇಲೆ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಬಗ್ಗೆ ಕೆಪಿಎಸ್ಸಿ ಕಾರ್ಯದರ್ಶಿಗಳು ಶುಕ್ರವಾರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಅರ್ಜಿ ಆಹ್ವಾನಿಸಿತ್ತು.
ಈ ಹುದ್ದೆಗಳಿಗೆ ಸುಮಾ ಎಸ್. ಸಾಹುಕಾರ ಅರ್ಜಿ ಸಲ್ಲಿಸಿ 3ಬಿ ಮೀಸಲಾತಿ ಕೋರಿದ್ದರು. ಪರೀಕ್ಷೆ ಬರೆದು ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅವರ ಮೂಲ ದಾಖಲೆಗಳ ಪರಿಶೀಲನೆ ನಡೆಸಿದಾಗ ಆದಾಯ ವಿವರದಲ್ಲಿ ತಪ್ಪು ಮಾಹಿತಿ ಸಲ್ಲಿಸಿರುವುದು ಕಂಡುಬಂದಿದೆ ಎಂದು ಹೇಳಲಾಗಿದೆ.


