ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಕಂದಾಯ ಮತ್ತು ಆಡಳಿತ ವಲಯದಲ್ಲಿ ತೀವ್ರ ಆತಂಕ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.
ಅಧಿಕಾರಿಯ ಮೊಬೈಲ್ ಫೋನ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಿಚ್ ಆಫ್ ಆಗಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದ್ದು, ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ
ನಾಪತ್ತೆಯಾಗಿರುವ ಅಧಿಕಾರಿಯನ್ನು ಪತ್ತೆಹಚ್ಚುವಂತೆ ಕೋರಿ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ನಗರ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ನೆಟ್‌ವರ್ಕ್ ಆಧರಿಸಿ ಅಧಿಕಾರಿಯ ಚಲನವಲನಗಳನ್ನು ವಿಮಾನ ನಿಲ್ದಾಣದವರೆಗೆ ಯಶಸ್ವಿಯಾಗಿ ಟ್ರ್ಯಾಕ್ ಮಾಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡಿರುವ ಅವರು ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಆದರೆ, ಯಾವುದೇ ಮುನ್ಸೂಚನೆ ನೀಡದೆ ಅವರು ದಿಢೀರ್ ನಾಪತ್ತೆಯಾಗಲು ಕಾರಣವೇನು ಮತ್ತು ದೆಹಲಿಗೆ ತೆರಳಲು ಇದ್ದ ತುರ್ತು ಸಂದರ್ಭವೇನು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ಎಲ್ಲಾ ಕೋನಗಳಿಂದಲೂ ಸುಳಿವು ಕಲೆಹಾಕುತ್ತಿದ್ದು, ಪ್ರಕರಣದ ನಿಗೂಢತೆ ಭೇದಿಸಲು ತನಿಖೆ ಮುಂದುವರಿಸಿದ್ದಾರೆ.


