ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪ್ರತಿಯೊಬ್ಬರೂ ಖಚಿತಪಡಿಸಿಕೊಳ್ಳಬೇಕು.
ಹೆಸರು ಇಲ್ಲದಿದ್ದರೆ ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳು ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಬೇಕು.
ಯಾವುದೇ ಕಾರಣಕ್ಕೂ ಹೆಸರು ಕೈಬಿಡದಂತೆ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.
ಬಿಹಾರ, ಪಶ್ಚಿಮ ಬಂಗಾಳ ಸೇರಿ ಬೇರೆ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಿದ್ದಾರೆ. ನಮ್ಮ ರಾಜ್ಯದಲ್ಲೂ ಇದು ಜಾರಿಗೆ ಬರಬಹುದು. ಮತದಾರ ಅಲ್ಲದಿದ್ರೆ ಯಾಕೆ ನಾವು ಗ್ಯಾರಂಟಿ ಯೋಜನೆ ಕೊಡಬೇಕು ಎಂದರು.
ರಾಜ್ಯಾದ್ಯಂತ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನ ಆರಂಭವಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಜುಲೈ 29ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ನಂತರ ಕರಡು ಮತಪಟ್ಟಿ ಪ್ರಕಟವಾಗಲಿದೆ.
ಮುಖ್ಯಮಂತ್ರಿ D.K ಶಿವಕುಮಾರ್ ನಿವಾಸದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಆರಂಭಗೊಂಡಿದ್ದು, ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಿದರು. ರಾಜ್ಯದ ಎಲ್ಲ ನಾಗರಿಕರು ಈ ಪ್ರಕ್ರಿಯೆಗೆ ಸಹಕರಿಸಿ, ಮತದಾನದ ಹಕ್ಕು ಮತ್ತು ಸರ್ಕಾರಿ ಸೌಲಭ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಮನವಿ ಮಾಡಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಸರ್ಕಾರ ಮನವಿ ಮಾಡಿದ್ದು, ಯಾವುದೇ ತೊಂದರೆ ಆಗದಂತೆ ಮುಂಚಿತವಾಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.


