ಬಾಗಲಕೋಟೆ : ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ಪಟ್ಟಣದ ಸಮೀಪ ಕಬ್ಬು ಬೆಳೆಗಾರರು (Sugarcane growers) ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಧರಣಿ ಕುಳಿತಿದ್ದರಿಂದ ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಸ್ಥಳದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇನ್ನೊಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಲಾಗಿದ್ದು, ಪ್ರತಿಭಟನಾ ನಿರತ ರೈತರು ಹೆದ್ದಾರಿಯ ಪಕ್ಕದಲ್ಲೇ ಪೆಂಡಾಲ್ ಹಾಕಿ ಅಹೋರಾತ್ರಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯಾವುದೇ ಅಹಿತಕರ ಸನ್ನಿವೇಶ ನಿರ್ಮಾಣವಾಗದಂತೆ ತಡೆಯಲು ಟೋಲ್ ಗೇಟ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.


