ಗದಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ಆಸಾಮಿಯನ್ನು ಗದಗ ಶಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಈರಣ್ಣ ಇನ್‌ಸ್ಟಾಗ್ರಾಂನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ತಾನು ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದ. ಕೆಲಸದ ಆಸೆಯಲ್ಲಿದ್ದ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು, ಜಾಬ್ ಆಫರ್ ನೀಡುವುದಾಗಿ ನಂಬಿಸಿ ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾನೆ. ಸಾಲ ತೀರಿಸಲು ಈ ವಂಚನೆಯ ಹಾದಿ ತುಳಿದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಬಂಧಿತ ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಹಲವಾರು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಉದ್ಯೋಗದ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆತನ ಬ್ಯಾಗ್‌ನಲ್ಲಿ ನಿರೋಧ್ ಪ್ಯಾಕೆಟ್‌ಗಳು ಪತ್ತೆಯಾಗಿರುವುದು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ಜಾಲದಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ ಹಾಗೂ ಯುವತಿಯರ ಶೋಷಣೆ ನಡೆದಿದೆಯೇ ಎಂಬ ಕೋನದಲ್ಲಿ ಗದಗ ಶಹರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


