ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಯಿಂದ ಮಹತ್ವದ ಅಂಶಗಳು ಹೊರಬಿದ್ದಿವೆ.
ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರ ಬಳಿಯಿದ್ದ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್‌ಗಳನ್ನು ತಾಂತ್ರಿಕ ಪರಿಶೀಲನೆಗೆ ಒಳಪಡಿಸಿದಾಗ ಒಟ್ಟು 173 ವಿಭಿನ್ನ ಫೈಲ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ 100ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 11ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ವಿಭಾಗದ ಬ್ಯಾರಕ್‌ಗಳಲ್ಲಿ ಪೊಲೀಸರು ನಡೆಸಿದ ದಿಢೀರ್ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಹಾಗೂ ವಿಚಾರಣಾಧೀನ ಕೈದಿ ಪ್ರತಾಪ್ ರೈ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು.
ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ಭಾಗವಾಗಿ ಜಪ್ತಿ ಮಾಡಲಾಗಿದ್ದ ಮೊಬೈಲ್ ಮತ್ತು ಪೆನ್‌ಡ್ರೈವ್‌ಗಳನ್ನು ಪೊಲೀಸರು ತಕ್ಷಣವೇ ಎಫ್‌ಎಸ್‌ಎಲ್ ತಪಾಸಣೆಗೆ ಕಳುಹಿಸಿಕೊಟ್ಟಿದ್ದರು.
ಎಫ್‌ಎಸ್‌ಎಲ್ ಕೈಗೊಂಡ ತಾಂತ್ರಿಕ ಪರಿಶೀಲನೆಯಲ್ಲಿ ಪತ್ತೆಯಾದ ವಿಡಿಯೋಗಳು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಿಗೆ ಸಂಬಂಧಿಸಿದ್ದಾಗಿವೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಇದ್ದುಕೊಂಡೇ ವಾಟ್ಸ್‌ಆಯಪ್ ಮೂಲಕ ಹಲವು ಮಹಿಳೆಯರಿಗೆ ವಿಡಿಯೋ ಕಾಲ್ ಮಾಡುತ್ತಿದ್ದರೆಂಬ ಹಾಗೂ ಸೆಲ್‌ನಲ್ಲಿದ್ದ ಟಿವಿ ಬಳಸಿ ವಿಡಿಯೋಗಳನ್ನು ವೀಕ್ಷಿಸುತ್ತಿದ್ದರೆಂಬ ಗಂಭೀರ ಆರೋಪಗಳಿಗೂ ಈ ಡಿಜಿಟಲ್ ಆಧಾರಗಳು ಪುಷ್ಟಿ ನೀಡುವಂತಂತಿವೆ.


