ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡರ್ ಮೇಲೆ ಕೈದಿಗಳು ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಸೆಪ್ಟೆಂಬರ್ 2ರಂದು ಬೆಳಗ್ಗೆ ಸುಮಾರು 11.30ಕ್ಕೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಜೈಲಿನ ಶಿಕ್ಷಾ ಬಂಧಿ ವಿಭಾಗದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾರ್ಡರ್ ಮಂಜುನಾಥ್ ಅವರು ಕೈದಿಗಳ ವಸ್ತುಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ, ಏಕಾಏಕಿ ಕೆಲ ಕೈದಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಹಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್, ಕಲಂದರ್ ಶಫಿ ಸೇರಿದಂತೆ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ವಾರ್ಡರ್ ಮಂಜುನಾಥ್ ಅವರನ್ನು ಬ್ಯಾರಕ್‌ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅವರ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆ ಗಮನಕ್ಕೆ ಬರುತ್ತಿದ್ದಂತೆ ಅಲ್ಲಿಗೆ ಬಂದ ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿ ಮಂಜುನಾಥ್ ಅವರನ್ನು ಆರೋಪಿಗಳಿಂದ ರಕ್ಷಿಸಿದ್ದಾರೆ.


