ಬೆಂಗಳೂರು : ರಾಜ್ಯದಲ್ಲಿ 319 ಗಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ ನಡೆಸಿ, ವರದಿ ಕೊಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಕೆ ಪಿ ಎಸ್ ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಯ ಕುರಿತು ಗೃಹಕಚೇರಿ ಕೃಷ್ಣಾದಲಿ ಗುರುವಾರ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ಮೂಹಲಕ ಪರಿಶೀಲನೆ ನಡೆಸಿದರು.
ಪಾರದರ್ಶಕವಾಗಿ, ಅಕ್ರಮ ರಹಿತ ಪರೀಕ್ಷೆ ನಡೆಸಲು ಸಿದ್ಧತೆ; ಪರೀಕ್ಷಾ ಸಿಬ್ಬಂದಿಗೆ ತರಬೇತಿ
ಈ ಸಂದರ್ಭದಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನಡೆಸಲು ನಿರ್ದೇಶನ ನೀಡಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಹಲವಾರು ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಕೆಪಿಎಸ್ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ನಿಗಾ ವಹಿಸಬೇಕು. ಪೊಲೀಸ್ ನೇಮಕಾತಿ ಪರೀಕ್ಷೆಯ ಮಾದರಿಯಲ್ಲಿಯೇ ಸೂಕ್ತ ಭದ್ರತೆ ವ್ಯವಸ್ಥೆ ಕೈಗೊಳ್ಳುವಂತೆ ಇಲಾಖೆಗೆ ಸೂಚಿಸಿದರು.
ಪರೀಕ್ಷಾ ಕೇಂದ್ರದ ಆವರಣದಲ್ಲಿ ಯಾವುದೇ ಅನಧಿಕೃತ ವ್ಯಕ್ತಿಯ ಪ್ರವೇಶಕ್ಕೆ ಅವಕಾಶ ಇಲ್ಲ. ಪ್ರವೇಶಕ್ಕೆ ಅನುಮತಿ ಇರುವ ವ್ಯಕ್ತಿಯೂ ಭದ್ರತಾ ತಪಾಸಣೆಗೆ ಒಳಪಡಬೇಕು. ಮಾರ್ಗಸೂಚಿಯನ್ವಯ ಅನುಮತಿಸಿದ ವಸ್ತುಗಳನ್ನು ಮಾತ್ರ ಅವರು ತರಬಹುದು.
ಪರೀಕ್ಷಾ ಕೇಂದ್ರದ ಸೂಕ್ಷ್ಮತೆಯನ್ನು ಗುರುತಿಸಿ, ಅದಕ್ಕೆ ತಕ್ಕಂತೆ ಸಿಬ್ಬಂದಿ ನಿಯೋಜನೆ ಮಾಡುವಂತೆ ಸೂಚನೆನೀಡಿದರು.
ಹೆಚ್ಚುವರಿ ಭದ್ರತಾ ಉಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಬಹುದು. ಭದ್ರತೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅಗತ್ಯವಿದ್ದಲ್ಲಿ ಇತರ ಕಡೆಗಳಿಂದ ನಿಯೋಜಿಸಲು ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್‌ನೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ಅಂತಹ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಇದೇ ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ
ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನಿಯೋಜನೆ ಮಾಡಲಾಗುತ್ತಿದೆ. ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜು ಸಿಬ್ಬಂದಿಯಾಗಿರಬೇಕು ಎಂದು ಸೂಚಿಸಿದರು.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪರೀಕ್ಷಿಸಿದ ನಂತರ ಮತ್ತೊಮ್ಮೆ ತಪಾಸಣೆ ನಡೆಸುವುದು ಹಾಗೂ ಪರೀಕ್ಷಾ ಕೊಠಡಿಯಲ್ಲಿ ಕಟ್ಟೆಚ್ಚರಿಕೆ ವಹಿಸಲು ಇಬ್ಬರು ಮೇಲ್ವಿಚಾರಕರ ನಿಯೋಜನೆ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳ ಭಾಗವಹಿಸುವಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.


