ಬಾಗಲಕೋಟೆ: ಸಾರ್ವಜನಿಕರಿಗೆ ಅನಗತ್ಯ ತೊಂದರೆ, ಮಧ್ಯವರ್ತಿಗಳ ಹಾವಳಿ ಮತ್ತು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ 9 ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಮುಧೋಳ, ಬೀಳಗಿ, ಹುನಗುಂದ, ಇಳಕಲ್, ತೇರದಾಳ, ಗುಳೇದಗುಡ್ಡ ಹಾಗೂ ಕೆರೂರು ಕಚೇರಿಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಲೋಕಾಯುಕ್ತ ಎಸ್‌ಪಿ ಮಹಾಲಿಂಗ ನಂದಗಾಂವಿ ಅವರ ಮಾರ್ಗದರ್ಶನ ಹಾಗೂ ಡಿವೈಎಸ್‌ಪಿ ಸುರೇಶ್ ರೆಡ್ಡಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.
7 ಮಂದಿ ಸಿಪಿಐ ಹಾಗೂ 24 ಸಿಬ್ಬಂದಿಯನ್ನೊಳಗೊಂಡ ಒಟ್ಟು 32 ಜನರ ತಂಡವು ಕಚೇರಿಗಳಲ್ಲಿನ ದಾಖಲೆಗಳನ್ನು ತೀವ್ರವಾಗಿ ಪರಿಶೀಲಿಸುತ್ತಿದೆ.
ಪ್ರಸ್ತುತ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದ್ದು, ತಪಾಸಣಾ ವರದಿ ಕೈಸೇರಿದ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಎಸ್‌ಪಿ ಮಹಾಲಿಂಗ ನಂದಗಾಂವಿ ಮಾಹಿತಿ ನೀಡಿದ್ದಾರೆ.


