ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ದಶಕಗಳ ಕಾಯುವಿಕೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಕೆ ಆರಂಭವಾಗಿದೆ.
ಶನಿವಾರ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಘಟಾನುಘಟಿ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ಸಮಾರಂಭದ ಅತ್ಯಂತ ಭಾವುಕ ಕ್ಷಣವೆಂದರೆ, ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯ ಮೇಲಿದ್ದ ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರಿಗೆ ಗೌರವ ಸಲ್ಲಿಸಿದ್ದು. ಬಂಗಾಳದಲ್ಲಿ ದಶಕಗಳಿಂದ ಪಕ್ಷಕ್ಕಾಗಿ ದುಡಿದಿರುವ ಸರ್ಕಾರ್ ಅವರ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ, ನಂತರ ಅವರನ್ನು ಆಲಂಗಿಸಿಕೊಂಡು ಶುಭ ಹಾರೈಸಿದರು. ಸಾಮಾನ್ಯ ಕಾರ್ಯಕರ್ತನಿಗೆ ಪ್ರಧಾನಿ ನೀಡಿದ ಈ ಗೌರವ ನೆರೆದಿದ್ದ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಯಿತು.


